KALPATHARU KRANTHI

ಮನುಷ್ಯನ ಜೀವನದಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯ, ಸದುಪಯೋಗಪಡಿಸಿಕೊಳ್ಳಿ : ಜಿ. ಅಶ್ವತ್ ನಾರಾಯಣ್.

Spread the love

ತಿಪಟೂರು : ಮನುಷ್ಯನ ಜೀವನದಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದ ಕಾಲಘಟ್ಟವಾಗಿದ್ದು, ಅದನ್ನು ಸದುಪಯೋಗಪಡಿಸಿಕೊಂಡರೆ ಜೀವನದಲ್ಲಿ ಎತ್ತರಕ್ಕೆ ಬೆಳೆಯಬಹುದು ಎಂದು ಹೊನ್ನವಳ್ಳಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ. ಅಶ್ವತ್ ನಾರಾಯಣ್ ತಿಳಿಸಿದರು.

ನಗರದ ಹೊರವಲಯದ ಶ್ರೀ ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ವಾರ್ಷಿಕೋತ್ಸವ ‘ಅದ್ವೀತೀಯ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು
ವಿದ್ಯಾರ್ಥಿ ಜೀವನ ಮನುಷ್ಯನ ಬದುಕಿನ ಮಹತ್ವದ ಹಂತವಾಗಿದೆ. ಈ ಅವಧಿಯಲ್ಲಿ ಕಷ್ಟಪಟ್ಟು ಓದಿ ಸಾಧನೆ ಮಾಡಿದರೆ ಉನ್ನತ ಸ್ಥಾನಕ್ಕೇರಬಹುದು. ಪೋಷಕರು ಅಪಾರ ಭರವಸೆಯೊಂದಿಗೆ ಮಕ್ಕಳನ್ನು ಕಾಲೇಜಿಗೆ ಕಳುಹಿಸುತ್ತಾರೆ. ಅವರ ಕಾಳಜಿಯನ್ನು ಅರ್ಥಮಾಡಿಕೊಂಡು ವಿದ್ಯಾರ್ಥಿಗಳು ಶ್ರಮಪಟ್ಟು ವಿದ್ಯಾಭ್ಯಾಸ ಮಾಡಬೇಕು.


ಯುವಕರು ಹಾಗೂ ವಿದ್ಯಾರ್ಥಿಗಳು ಸಮಾಜದ ಮಾರ್ಗಸೂಚಿಗಳಾಗಿದ್ದು, ಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿ ಹಾಗೂ ಜನಸ್ನೇಹಿ ವ್ಯಕ್ತಿಗಳಿಗೆ ಮತ ಚಲಾಯಿಸಬೇಕು. ನೀವು ಚಲಾಯಿಸುವ ಪ್ರತಿಯೊಂದು ಮತವೂ ಸಮಾಜ ಮತ್ತು ವ್ಯವಸ್ಥೆಯ ಬದಲಾವಣೆಗೆ ಸಹಕಾರಿಯಾಗುತ್ತದೆ. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ವಿಧಾನಸಭೆ ಹಾಗೂ ಲೋಕಸಭೆ ಯಾವುದೇ ಚುನಾವಣೆಯಾದರೂ ಜನರ ಕಷ್ಟ-ಸುಖಗಳಿಗೆ ಸ್ಪಂದಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು.
ಶ್ರೀ ಬಸವೇಶ್ವರ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಹೃದಯಸ್ಪರ್ಶಿಯಾಗಿ ಸ್ವಾಗತಿಸಿದ್ದು ಸಂತಸ ತಂದಿದೆ. ವಿದ್ಯಾರ್ಥಿಗಳ ಸೇವೆಗೆ ನಾನು ಸದಾ ಕಂಕಣಬದ್ಧನಾಗಿದ್ದೇನೆ. ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದ ವೇಳೆ ಶಾಲಾ-ಕಾಲೇಜುಗಳ ಅಭಿವೃದ್ಧಿ ಹಾಗೂ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.


ಶ್ರೀ ಬಸವೇಶ್ವರ ಸಮೂಹ ಸಂಸ್ಥೆಗಳ ಮುಖ್ಯಸ್ಥ ಹೆಚ್.ಎನ್. ಹಾಲಪ್ಪ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕು. ಶ್ರೀ ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯವು ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾದ ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಉತ್ತಮ ಬೋಧಕ ವರ್ಗವನ್ನು ಹೊಂದಿದ್ದು, ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀ ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ರಾಜಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ :ಮಂಜುನಾಥ್ ಹಾಲ್ಕುರಿಕೆ

Exit mobile version