KALPATHARU KRANTHI

ತಿಪಟೂರಿನಲ್ಲಿ ನೂತನ ಮೆಮೊ ರೈಲಿಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ .

Spread the love

ತಿಪಟೂರು, ಜು. 13: ಹೆದ್ದಾರಿಗಳು ಮತ್ತು ರೈಲ್ವೆ ಮಾರ್ಗಗಳು ದೇಶದ ಅಭಿವೃದ್ಧಿಯ ಸಂಕೇತಗಳಾಗಿದ್ದು, ಮೂಲಸೌಕರ್ಯ ವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ನಗರದ ರೈಲ್ವೆ ನಿಲ್ದಾಣದಲ್ಲಿ ನೂತನ ಮೆಮೊ ರೈಲಿಗೆ ಹಸಿರು ನಿಶಾನೆ ನೀಡಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಅಭಿವೃದ್ಧಿಯೇ ಕೇಂದ್ರ ಸರ್ಕಾರದ ಧ್ಯೇಯವಾಗಿದ್ದು, ಜನರು ನೀಡಿರುವ ಅಧಿಕಾರವನ್ನು ಜನರ ಕಲ್ಯಾಣಕ್ಕಾಗಿ ಬಳಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ 12 ವರ್ಷಗಳ ಆಡಳಿತದಲ್ಲಿ 50 ವರ್ಷಗಳಷ್ಟು ಅಭಿವೃದ್ದಿಯಾಗಿದೆ. ದೇಶದಲ್ಲಿ ಹಲವು ಮಹತ್ವದ ಅಭಿವೃದ್ಧಿ ಯೋಜನೆಗಳು ಜಾರಿಯಾಗಿವೆ. ತುಮಕೂರು ಲೋಕಸಭಾ ಕ್ಷೇತ್ರದ ಸಂಸದನಾಗಿ ಜಿಲ್ಲೆಯ ಅಭಿವೃದ್ಧಿಗೆ ಸುಮಾರು ₹52 ಸಾವಿರ ಕೋಟಿ ಅನುದಾನವನ್ನು ತಂದಿದ್ದು, ತುಮಕೂರು–ಬೆಂಗಳೂರು ನಾಲ್ಕು ಹಳಿ ರೈಲ್ವೆ ಮಾರ್ಗ, ರೈಲ್ವೆ ನಿಲ್ದಾಣಗಳ ಅಭಿವೃದ್ಧಿ, ಚೆನ್ನೈ–ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ ಹಾಗೂ ತಿಮ್ಮರಾಜನಹಳ್ಳಿ ಸಮೀಪ ರೈಲ್ವೆ ಕಂಟೇನರ್ ಟರ್ಮಿನಲ್ ಸೇರಿದಂತೆ ಹಲವು ಯೋಜನೆಗಳು ಅನುಷ್ಠಾನಗೊಳ್ಳಲಿವೆ.

ತಿಪಟೂರು ಅಭಿವೃದ್ಧಿ ಹೊಂದುತ್ತಿರುವ ತಾಲೂಕು ಕೇಂದ್ರವಾಗಿದ್ದು, ಮುಂದಿನ ದಿನಗಳಲ್ಲಿ ತಿಪಟೂರನ್ನು ಜಿಲ್ಲಾ ಕೇಂದ್ರವನ್ನಾಗಿಸುವುದರ ಜೊತೆಗೆ ರಾಜ್ಯದಲ್ಲಿಯೇ ಮಾದರಿ ತಾಲೂಕಾಗಿ ರೂಪಿಸುವ ಗುರಿ ಹೊಂದಿದ್ದೇನೆ ಎಂದು ತಿಳಿಸಿದರು.

ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಮಾತನಾಡಿ, ಕೇಂದ್ರ ಸಚಿವ ವಿ. ಸೋಮಣ್ಣ ಅವರು ಯಾವುದೇ ಭೇದಭಾವವಿಲ್ಲದೆ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುತ್ತಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್, ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್, ದಿಶಾ ಸಮಿತಿ ಸದಸ್ಯ ಆಯರಹಳ್ಳಿ ಶಂಕರಪ್ಪ, ಬಿಜೆಪಿ ಯುವ ಮುಖಂಡ ವಿಶ್ವದೀಪ್ ನಾಗೇಶ್, ಮುಖಂಡರಾದ ಶಶಿಕಿರಣ್, ರಾಮ್ ಮೋಹನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ :ಮಂಜುನಾಥ್ ಹಾಲ್ಕುರಿಕೆ

Exit mobile version