ತಿಪಟೂರು: ತುಮಕೂರು ದಸರಾ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಆದ್ಯತೆ ನೀಡಿ, ಅವರಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಡಾ. ಮುರುಳೀಧರ್ ಹಾಲಪ್ಪ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ತುಮಕೂರು ಜಿಲ್ಲಾಡಳಿತ, ದಸರಾ ಆಚರಣಾ ಸಮಿತಿ ಹಾಗೂ ಹಾಲಪ್ಪ ಪ್ರತಿಷ್ಠಾನದ ಸಹಯೋಗದಲ್ಲಿ ತುಮಕೂರು ದಸರಾ-2026ರ ಅಂಗವಾಗಿ ಐಟಿಐ, ಡಿಪ್ಲೊಮಾ, ಪಿಯುಸಿ, ಪದವಿ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತುಮಕೂರು ಜಿಲ್ಲೆಯ ಪ್ರತಿಯೊಂದು ತಾಲೂಕು ತನ್ನದೇ ಆದ ವಿಶಿಷ್ಟತೆ, ಇತಿಹಾಸ, ಕಲೆ, ಸಾಹಿತ್ಯ ಹಾಗೂ ಕೃಷಿ ಪರಂಪರೆಯನ್ನು ಹೊಂದಿದೆ. ದಸರಾ ಮೂಲಕ ಜಿಲ್ಲೆಯ ಈ ವೈವಿಧ್ಯತೆಯನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಅವಕಾಶ ದೊರೆಯುತ್ತದೆ. ವಿದ್ಯಾರ್ಥಿಗಳು ತಮ್ಮ ತಾಲೂಕು ಹಾಗೂ ಜಿಲ್ಲೆಯ ವೈಶಿಷ್ಟ್ಯತೆಗಳನ್ನು ಅರಿತುಕೊಂಡು, ಅವುಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದರು.
ದಸರಾ ಕೇವಲ ಮನರಂಜನೆಗೆ ಸೀಮಿತವಾಗದೆ, ಯುವ ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಬೇಕು. ಮೈಸೂರು ದಸರಾ ತನ್ನದೇ ಆದ ವಿಶಿಷ್ಟ ಪರಂಪರೆಯನ್ನು ಹೊಂದಿದೆ. ಅದೇ ರೀತಿ ಮಡಿಕೇರಿ ಹಾಗೂ ಮಂಗಳೂರು ದಸರಾಗಳ ಮಾದರಿಯಲ್ಲಿ ತುಮಕೂರು ದಸರಾವನ್ನೂ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪದವಿ ಪಡೆದರೆ ಮಾತ್ರ ಸಾಲದು. ಯುಪಿಎಸ್‌ಸಿ, ಕೆಪಿಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜು ದಿನಗಳಿಂದಲೇ ಸಿದ್ಧತೆ ನಡೆಸಬೇಕು. ನಿರಂತರ ಅಧ್ಯಯನ, ಶಿಸ್ತು ಹಾಗೂ ಆತ್ಮವಿಶ್ವಾಸದಿಂದ ಐಎಎಸ್, ಐಪಿಎಸ್‌ನಂತಹ ಉನ್ನತ ಹುದ್ದೆಗಳನ್ನು ಪಡೆಯುವುದು ಕಷ್ಟವಲ್ಲ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸ್ಪರ್ಧೆಯಲ್ಲಿ ದಸರಾ, ತುಮಕೂರು ಜಿಲ್ಲೆಯ ವೈಶಿಷ್ಟ್ಯತೆ, ವಿವಿಧ ತಾಲೂಕುಗಳ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆ ಕುರಿತು ವಿದ್ಯಾರ್ಥಿಗಳು ಪ್ರಬಂಧ ಹಾಗೂ ಭಾಷಣ ಮಂಡಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ಪದಕ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಶಿಕುಮಾರ್, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಡಿ. ಶಿವಕುಮಾರ್ ಸೇರಿದಂತೆ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ : ಮಂಜುನಾಥ್ ಹಾಲ್ಕುರಿಕೆ