KALPATHARU KRANTHI

ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದ ವಿರುದ್ಧ ಜನಾಭಿಪ್ರಾಯದ ಫಲಿತಾಂಶ: ವಿಶ್ವದೀಪ್ ನಾಗೇಶ್

Spread the love

ತಿಪಟೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

ತಿಪಟೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಭ್ರಷ್ಟ ಆಡಳಿತ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಯುವ ಮುಖಂಡ ವಿಶ್ವದೀಪ್ ನಾಗೇಶ್ ತಿಳಿಸಿದರು.

ನಗರದ ನಗರಸಭೆ ವೃತ್ತದಲ್ಲಿ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ವಿಶ್ವದೀಪ್ ನಾಗೇಶ್, ಪದವೀಧರ ಕ್ಷೇತ್ರದ ಚುನಾವಣಾ ಫಲಿತಾಂಶವು ರಾಜ್ಯದ ಭವಿಷ್ಯದ ರಾಜಕೀಯ ದಿಕ್ಸೂಚಿಯಾಗಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಪಕ್ಷಪಾತದ ಧೋರಣೆಯ ವಿರುದ್ಧ ಜನರು ಮತ ಚಲಾಯಿಸಿದ್ದಾರೆ. ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ನಾಯಕರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದರು.

ಇವಿಎಂ ಹಾಗೂ ಚುನಾವಣಾ ಆಯೋಗದ ಬಗ್ಗೆ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ನಾಯಕರು, ಪದವೀಧರ ಕ್ಷೇತ್ರದ ನಾಲ್ಕೂ ಕ್ಷೇತ್ರಗಳಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆದಿದ್ದರೂ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಿರುವುದನ್ನು ಗಮನಿಸಬೇಕು. ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ ಪಕ್ಷ ಅಪಪ್ರಚಾರದಲ್ಲಿ ತೊಡಗಿದೆ. ಈ ಹಿಂದೆ ಇವಿಎಂ ಸರಿಯಿಲ್ಲ ಎಂದು ಆರೋಪಿಸುತ್ತಿದ್ದವರು ಈಗ ಎಸ್‌ಐಆರ್ ಸರಿಯಿಲ್ಲ ಎಂದು ಹೋರಾಟ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎನ್‌ಡಿಎ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗಂಗರಾಜು ಮಾತನಾಡಿ, ಎನ್‌ಡಿಎ ಕಾರ್ಯಕರ್ತರ ಪರಿಶ್ರಮಕ್ಕೆ ತಕ್ಕ ಫಲಿತಾಂಶ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ರಾಜ್ಯದಲ್ಲಿ ಪಕ್ಷದ ನಾಯಕತ್ವದ ಮೇಲೆ ಜನರು ವಿಶ್ವಾಸವಿಟ್ಟಿದ್ದಾರೆ. ನಾಲ್ಕೂ ಕ್ಷೇತ್ರಗಳಲ್ಲಿ ಹೆಚ್ಚಿನ ಮತಗಳನ್ನು ನೀಡಿ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್ ಮುಖಂಡ ರಾಕೇಶ್ ಮಾತನಾಡಿ, ರಾಜ್ಯ ಸರ್ಕಾರದ ಜನವಿರೋಧಿ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಮೇಲೆ ನಂಬಿಕೆ ಇಟ್ಟಿರುವ ಪ್ರಜ್ಞಾವಂತ ಮತದಾರರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ ಎಂದರು.

ವಿಜಯೋತ್ಸವದಲ್ಲಿ ಬಿಜೆಪಿ ನಗರಾಧ್ಯಕ್ಷ ಜಗದೀಶ್, ಕೋಶಾಧ್ಯಕ್ಷ ಭೋಜೇಗೌಡ, ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಮ್ ಮೋಹನ್, ಮಹಿಳಾ ಮೋರ್ಚಾ ಅಧ್ಯಕ್ಷೆ ಜಯಲಕ್ಷ್ಮಿ, ಮುಖಂಡರಾದ ಸಿಂಗ್ರಿದತ್ತಣ್ಣ, ಹಳೇಪಾಳ್ಯ ಮಂಜುನಾಥ್, ಕಟ್ಟಿಗೇನಹಳ್ಳಿ ಸದಾಶಿವಯ್ಯ, ಬೋರ್‌ವೆಲ್ ಜಗಣ್ಣ, ವಿಶ್ವನಾಥ್, ಜೆಡಿಎಸ್ ಮುಖಂಡ ಹುಣಸೇಘಟ್ಟ ಪ್ರಕಾಶ್, ಎಸ್‌ಟಿ ಮೋರ್ಚಾ ಮುಖಂಡ ಹಾಲ್ಕುರಿಕೆ ದೊಡ್ಡಯ್ಯ.ನಗರಸಭಾ ಮಾಜಿ ಸದಸ್ಯರಾದ ಮೋಹನ್ ಕುಮಾರ್. ಹರಿಬಾಬು. ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ವರದಿ: ಮಂಜುನಾಥ್ ಹಾಲ್ಕುರಿಕೆ

Exit mobile version