ತಿಪಟೂರು: ಕಾರ್ಮಿಕರು ಶ್ರಮಪಟ್ಟು ದುಡಿಯುವ ಹಣದಲ್ಲಿ ಸ್ವಲ್ಪ ಭಾಗವನ್ನು ತಮ್ಮ ಮಕ್ಕಳ ಶಿಕ್ಷಣಕ್ಕೆ ವಿನಿಯೋಗಿಸಿ, ಅವರಿಗೆ ಹೆಚ್ಚು ಶಿಕ್ಷಣ ನೀಡಬೇಕು ಎಂದು ಕೆಪಿಸಿಸಿ ಸದಸ್ಯ ವಿ. ಯೋಗೇಶ್ ತಿಳಿಸಿದರು.

ತಾಲ್ಲೂಕಿನ ಕರಡಾಳು ಸಂತೆ ಮೈದಾನದಲ್ಲಿ ಕಾರ್ಮಿಕ ದಿನಾಚರಣೆ ಅಂಗವಾಗಿ ಕಲ್ಪತರು ಕಟ್ಟಡ ಹಾಗೂ ಇತರೆ ಕಾರ್ಮಿಕ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಮಿಕ ದಿನಾಚರಣೆ, ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಕಾರ್ಮಿಕರ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಅನನ್ಯವಾಗಿದೆ. ಕಷ್ಟಪಟ್ಟು ದುಡಿಯುವ ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ನಿಮ್ಮ ಮಕ್ಕಳು ಉನ್ನತ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಯಲ್ಲಿ ಬದುಕುವಂತಾಗಬೇಕು. ದೇಶಕ್ಕೆ ಕಾರ್ಮಿಕರು ಹಾಗೂ ರೈತರು ಬೆನ್ನೆಲುಬಾಗಿದ್ದಾರೆ.ಕಾರ್ಮಿಕರ ಹೇಳಿಗೆಗಾಗಿ
ಸರ್ಕಾರ ಹಲವಾರು ಸೌಲಭ್ಯಗಳನ್ನು ನೀಡುತ್ತಿದೆ. ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ರೈಲ್ವೆ ಕಾರ್ಮಿಕರ ಯೂನಿಯನ್ ಕಾರ್ಯದರ್ಶಿ ಕಾಂತರಾಜು ಮಾತನಾಡಿ, ಕಾರ್ಮಿಕರು ದೇಶದ ಶಕ್ತಿಯಾಗಿದ್ದಾರೆ. ಸಂಘಟಿತ ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಕಷ್ಟಪಟ್ಟು ದುಡಿಯುತ್ತಿದ್ದಾರೆ. ಬಡ ಕಾರ್ಮಿಕರಿಗೆ ಸರ್ಕಾರಗಳು ಹೆಚ್ಚಿನ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಕಲ್ಪತರು ಕಟ್ಟಡ ಹಾಗೂ ಇತರೆ ಕಾರ್ಮಿಕ ಸಂಘದ ಅಧ್ಯಕ್ಷ ಸರ್ವೇಶಾಚಾರ್, ಟಿಎಪಿಎಂಎಸ್ ಮಾಜಿ ಸದಸ್ಯ ಮಲ್ಲೇನಹಳ್ಳಿ ಕಾಂತರಾಜು, ಕಾರ್ಮಿಕ ಸಂಘದ ಗೌರವಾಧ್ಯಕ್ಷ ಭಾಸ್ಕರಾಚಾರ್, ರಾಜು ಬೆಣ್ಣೆನಹಳ್ಳಿ.ಬೆಳ್ಳೆಕಟ್ಟೆ ಶಂಕರಪ್ಪ.ಎಪಿಎಂಸಿ ಮಾಜಿ ನಿರ್ದೇಶಕ ಸಿದ್ದಲಿಂಗಸ್ವಾಮಿ. ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವರದಿ :ಮಂಜುನಾಥ್ ಹಾಲ್ಕುರಿಕೆ





