Spread the love

ತಿಪಟೂರು: ಮಾರ್ಚ್ 26ರಿಂದ 29ರವರೆಗೆ ತಿಪಟೂರಿನ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ನೇತೃತ್ವದಲ್ಲಿ ವಿಟಿಯು ರಾಜ್ಯಮಟ್ಟದ 27ನೇ ಅಥ್ಲೆಟಿಕ್ ಕ್ರೀಡಾಕೂಟ “ಕ್ರೀಡಾಕಲ್ಪ-2.0” ಆಯೋಜಿಸಲಾಗಿದೆ.


ನಗರದ ಕಲ್ಪತರು ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಸಂಸ್ಥೆಯ ಖಜಾಂಚಿ ಶಿವಪ್ರಸಾದ್ ಮಾತನಾಡಿ, ನಾಡಿನ ಹೆಮ್ಮೆಯಾದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದಲ್ಲಿ ನಾಲ್ಕು ದಿನಗಳ ಕಾಲ ರಾಜ್ಯಮಟ್ಟದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಮಾರ್ಚ್ 26ರಂದು ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದ್ದು, ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಸಹಾಯಕ ಸಚಿವ ಸೋಮಣ್ಣ ಉದ್ಘಾಟನೆ ನೆರವೇರಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಪಿ.ಕೆ. ತಿಪ್ಪೆರುದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಕೆ. ಷಡಕ್ಷರಿ, ವಿಟಿಯು ಕುಲಪತಿಗಳಾದ ಡಾ. ವಿದ್ಯಾಶಂಕರ್, ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಬೆಂಗಳೂರು ಸೆನೆಟ್ ಸದಸ್ಯರಾದ ಬಿ. ಬಾಲಕೃಷ್ಣ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಅದೇ ದಿನ ಮಧ್ಯಾಹ್ನ 3 ಗಂಟೆಗೆ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಿಂದ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು, ಕ್ರೀಡಾಪಟುಗಳು ಹಾಗೂ ಅತಿಥಿಗಳ ಭವ್ಯ ಮೆರವಣಿಗೆ ನಡೆಯಲಿದ್ದು, ಸಂಜೆ 4 ಗಂಟೆಗೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಲಿದೆ.
ಮಾರ್ಚ್ 29ರಂದು ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ವಿಟಿಯು ಕುಲಸಚಿವರಾದ ಡಾ. ಪ್ರಸಾದ್ ಬಿ. ರಾಮಾಪುರೆ, ಹಣಕಾಸು ಅಧಿಕಾರಿ ಡಾ. ಪ್ರಶಾಂತ್ ನಾಯಕ್, ತಹಸೀಲ್ದಾರ್ ಮೋಹನ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಈ ಕ್ರೀಡಾಕೂಟದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕ್ರೀಡಾಕೂಟದ ಅಂಗವಾಗಿ ನಡೆಯುವ ಮನೋರಂಜನಾ ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ನಟ ವಿನಯ್ ರಾಜ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು ಹಾಗೂ ಅತಿಥಿಗಳಿಗೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಶಿವಪ್ರಸಾದ್ ತಿಳಿಸಿದರು.


ಸಂಸ್ಥೆಯ ಅಧ್ಯಕ್ಷ ಪಿ.ಕೆ. ತಿಪ್ಪೆರುದ್ರಪ್ಪ ಮಾತನಾಡಿ, ವಿಟಿಯು ಕ್ರೀಡಾಕೂಟ ನಮ್ಮ ಕಲ್ಪತರು ವಿದ್ಯಾಸಂಸ್ಥೆಯ ಸಹಯೋಗದಲ್ಲಿ ನಡೆಯುತ್ತಿರುವುದು ಸಂತಸದ ವಿಷಯವಾಗಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾ ಘೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಬಾಗೇಪಲ್ಲಿ ನಟರಾಜ್, ಟಿ.ಎಸ್. ಬಸವರಾಜು, ಬಿ.ಎಸ್. ಉಮೇಶ್, ಜಿ.ಪಿ. ದೀಪಕ್, ಕಾರ್ಯದರ್ಶಿಗಳಾದ ಉಮಾಶಂಕರ್, ಎಂ.ಆರ್. ಸಂಗಮೇಶ್, ಜಗದೀಶ್ ಮೂರ್ತಿ, ಹೆಚ್.ಜಿ. ಸುಧಾಕರ್ ಹಾಗೂ ಪ್ರಾಚಾರ್ಯರಾದ ಸತೀಶ್ ಉಪಸ್ಥಿತರಿದ್ದರು

ವರದಿ :ಮಂಜುನಾಥ್ ಹಾಲ್ಕುರಿಕೆ

error: Content is protected !!