Spread the love

ಗೃಹ ಕಚೇರಿಯಲ್ಲಿ ಬಸವ ಜಯಂತಿ ಆಚರಣೆ.

ತಿಪಟೂರು: ಗಣಿಬಾಧಿತ ಪ್ರದೇಶಾಭಿವೃದ್ಧಿ ಯೋಜನೆಗಾಗಿ ಮೀಸಲಿಟ್ಟಿರುವ ಹಣವನ್ನು ತಿಪಟೂರು, ಚಿಕ್ಕನಾಯಕನಹಳ್ಳಿ ಹಾಗೂ ಗುಬ್ಬಿ ತಾಲ್ಲೂಕಿನ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಬಳಸಬೇಕಾಗಿದ್ದು, ಅದು ದುರ್ಬಳಕೆಯಾಗುತ್ತಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಆರೋಪಿಸಿದರು.


ನಗರದ ತಮ್ಮ ಗೃಹ ಕಚೇರಿಯಲ್ಲಿ ಆಯೋಜಿಸಿದ್ದ ಜಗಜ್ಯೋತಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣಿಬಾಧಿತ ಪ್ರದೇಶಗಳಾದ ತಿಪಟೂರು ಸೇರಿದಂತೆ ಸುತ್ತಮುತ್ತಲಿನ ತಾಲ್ಲೂಕುಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಕೆ.ಬಿ. ಕ್ರಾಸ್ ಬಳಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭಿಸುವ ಯೋಜನೆ ರೂಪಿಸಲಾಗಿತ್ತು. ಆದರೆ, ಆ ಯೋಜನೆ ನೆನೆಗುದಿಗೆ ಬಿದ್ದಿದ್ದು, ಆ ಹಣವನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಮೇಲ್ದರ್ಜೆಗೇರಿಸಲು ಬಳಸಲು ಗೃಹ ಸಚಿವರು ಮುಂದಾಗಿರುವುದು ಸರಿಯಲ್ಲ ಎಂದು ಹೇಳಿದರು.
ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ ಹಾಗೂ ಗುಬ್ಬಿ ತಾಲ್ಲೂಕಿನ ಜನರು ತುರ್ತು ವೈದ್ಯಕೀಯ ಸೇವೆಗಾಗಿ ತುಮಕೂರು ಹಾಗೂ ಹಾಸನಕ್ಕೆ ತೆರಳಬೇಕಾದ ಪರಿಸ್ಥಿತಿ ಉಂಟಾಗಿದೆ. ಇದರಿಂದ ಅನೇಕರು ಪ್ರಾಣ ಕಳೆದುಕೊಂಡಿದ್ದು, ಅಪಘಾತಗಳ ಸಂದರ್ಭದಲ್ಲಿ ತೀವ್ರ ಸಮಸ್ಯೆಗಳು ಎದುರಾಗುತ್ತಿವೆ. ಆದ್ದರಿಂದ, ಗಣಿಬಾಧಿತ ಪ್ರದೇಶಾಭಿವೃದ್ಧಿ ಯೋಜನೆ ಹಣವನ್ನು ತುಮಕೂರಿಗೆ ಬಳಸದೇ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಬಳಸಬೇಕು ಎಂದು ಆಗ್ರಹಿಸಿದರು.
ತಿಪಟೂರು ನಗರದ ಹೃದಯಭಾಗದಲ್ಲಿ ಬಸವೇಶ್ವರರ ಪುತ್ಥಳಿ ನಿರ್ಮಿಸಬೇಕೆಂದು ಅವರು ಒತ್ತಾಯಿಸಿದರು. ಈ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಕ್ರಮ ಕೈಗೊಳ್ಳಬೇಕು ಎಂದರು. ನಗರದ ಕುಡಿಯುವ ನೀರಿನ ಮೂಲವಾದ ಈಚನೂರು ಕೆರೆಯ ನೀರು ಕಲೂಷಿತವಾಗಿದ್ದು, ಕೆರೆಯ ಅಭಿವೃದ್ಧಿಗೆ ಬಿಡುಗಡೆಯಾಗಿದ್ದ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದರು. ಈ ಕುರಿತು ನಗರಸಭೆ ಸ್ಪಷ್ಟನೆ ನೀಡಬೇಕು ಎಂದರು. ಜೊತೆಗೆ, ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವುದರಿಂದ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.


ಜೆಡಿಎಸ್ ಮುಖಂಡ ಮತ್ತಿಘಟ್ಟ ಶಿವಸ್ವಾಮಿ ಮಾತನಾಡಿ, ತಿಪಟೂರಿನಲ್ಲಿ ಬಸವೇಶ್ವರರ ಪುತ್ಥಳಿ ಸ್ಥಾಪನೆಗೆ ತಾಲ್ಲೂಕು ಆಡಳಿತದ ಇಚ್ಛಾಶಕ್ತಿಯ ಕೊರತೆಯೇ ಕಾರಣವಾಗಿದೆ ಎಂದು ಹೇಳಿದರು. ನಗರದ ಹೃದಯಭಾಗದಲ್ಲಿ ಪುತ್ಥಳಿ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ನಗರ ಜೆಡಿಎಸ್ ಅಧ್ಯಕ್ಷ ರಾಜು ಕಂಚಾಘಟ್ಟ, ವಿಎಸ್ಎಸ್ಎನ್ ನಿರ್ದೇಶಕ ಹಾಗೂ ಜೆಡಿಎಸ್ ಮುಖಂಡ ಸುದರ್ಶನ್ ಗೊರಗೊಂಡನಹಳ್ಳಿ, ನಟರಾಜ್ ಶಿವಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ:ಮಂಜುನಾಥ್ ಹಾಲ್ಕುರಿಕೆ

error: Content is protected !!