Spread the love

ನಶೆಮುಕ್ತ ತಿಪಟೂರು ನಿರ್ಮಾಣಕ್ಕೆ ಕ್ರಮ : ವೃತ್ತ ನಿರೀಕ್ಷಕ ಯತೀಶ್ ಕುಮಾರ್.

ತಿಪಟೂರು : ನಗರದಲ್ಲಿ ಗಾಂಜಾ ಮಾರಾಟ ಜಾಲ ಹೆಚ್ಚಾಗುತ್ತಿದ್ದು, ಗಾಂಧೀನಗರ ಸೇರಿದಂತೆ ಹೊಸದಾಗಿ ನಿರ್ಮಾಣವಾಗಿರುವ ಹೊರವಲಯದ ಬಡಾವಣೆಗಳಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ. ಗಾಂಜಾ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ನಗರ ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಒತ್ತಾಯಿಸಿದರು.
ನಗರದ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಗರ ಠಾಣೆ ವೃತ್ತ ನಿರೀಕ್ಷಕರಾದ ಯತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಯುವಕರು ಗಾಂಜಾ ವ್ಯಸನಕ್ಕೆ ಒಳಗಾಗಿ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ. ಗಾಂಜಾ ಮಾರಾಟಗಾರರು ಹಾಗೂ ವ್ಯಸನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


ಸಾರ್ವಜನಿಕರ ಮನವಿಗೆ ಪ್ರತಿಕ್ರಿಯಿಸಿದ ವೃತ್ತ ನಿರೀಕ್ಷಕ ಯತೀಶ್ ಕುಮಾರ್, “ಗಾಂಜಾ ಮಾರಾಟಗಾರರು ಮತ್ತು ವ್ಯಸನಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ನಶೆಮುಕ್ತ ತಿಪಟೂರು ನಿರ್ಮಾಣ ನಮ್ಮ ಆದ್ಯತೆಯಾಗಿದೆ. ಯಾವುದೇ ಕಾರಣಕ್ಕೂ ಗಾಂಜಾ ಜಾಲಕ್ಕೆ ಅವಕಾಶ ನೀಡುವುದಿಲ್ಲ. ಸಾರ್ವಜನಿಕರು ಮಾಹಿತಿ ನೀಡಿದರೆ ಮಾಹಿತಿದಾರರ ಹೆಸರನ್ನು ಗೌಪ್ಯವಾಗಿಡಲಾಗುವುದು” ಎಂದು ಭರವಸೆ ನೀಡಿದರು.
ನಗರವನ್ನು ಸುಮಾರು 20 ಬೀಟ್‌ಗಳಾಗಿ ವಿಂಗಡಿಸಿ ಪೊಲೀಸ್ ಸಿಬ್ಬಂದಿಯಿಂದ ಬೀಟ್ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಡೇನೂರು ಕಾಂತರಾಜು ಮಾತನಾಡಿ, “ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಬಾಲಕಿಯರ ಪದವಿಪೂರ್ವ ಕಾಲೇಜು ಮುಂಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ನಗರಸಭೆ ವೃತ್ತ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿನ ಟ್ರಾಫಿಕ್ ಸಿಗ್ನಲ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದೆ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಸಾರ್ವಜನಿಕ ಕುಂದುಕೊರತೆ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು” ಎಂದು ಒತ್ತಾಯಿಸಿದರು.


ಮಾರನಗೆರೆ ಬೋರ್‌ವೆಲ್ ಜಗಣ್ಣ ಮಾತನಾಡಿ, ಮಾರನಗೆರೆ ಭಾಗದಲ್ಲಿ ಪೊಲೀಸ್ ಬೀಟ್ ವ್ಯವಸ್ಥೆಯನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಯತೀಶ್ ಕುಮಾರ್, “ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯ. ಅಪರಾಧ ತಡೆಗೆ ನಾಗರಿಕರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು. ಮನೆ ಬಿಟ್ಟು ಹೊರ ಊರಿಗೆ ತೆರಳುವವರು ಹಣ, ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿ ಇಡಬೇಕು. ಅಗತ್ಯವಿದ್ದರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ರಾತ್ರಿ ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು. ಸಾಧ್ಯವಾದರೆ ಮನೆಗಳ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು” ಎಂದು ಸಲಹೆ ನೀಡಿದರು.
ಗಾಂಧೀನಗರ ಮಸೀದಿ ಮುಂಭಾಗದ ರಸ್ತೆ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಇಂದಿರಾನಗರ ರಸ್ತೆಯಲ್ಲಿ ಹೆಣ್ಣುಮಕ್ಕಳ ಮೇಲೆ ರ್ಯಾಗಿಂಗ್ ಹಾಗೂ ಅಪ್ರಾಪ್ತ ಬಾಲಕರು ವೀಲಿಂಗ್ ನಡೆಸುತ್ತಿರುವ ಕುರಿತು ದೂರುಗಳು ಬಂದಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಪೊಲೀಸ್ ಸಿಬ್ಬಂದಿ, ವಿವಿಧ ಇಲಾಖೆಗಳ ಮುಖಂಡರು ಹಾಗೂ ನಾಗರಿಕರು ಉಪಸ್ಥಿತರಿದ್ದರು.

ವರದಿ :ಮಂಜುನಾಥ್ ಹಾಲ್ಕುರಿಕೆ

error: Content is protected !!