ತಿಪಟೂರು: ದಲಿತರ ಕುಂದುಕೊರತೆಗಳ ಬಗ್ಗೆ ನಿಗಾ ವಹಿಸಬೇಕಾದ ಸಮಾಜ ಕಲ್ಯಾಣ ಇಲಾಖೆ ಕೇವಲ ಹಾಸ್ಟೆಲ್ ಹಾಗೂ ಕಚೇರಿಗಳ ಬಿಲ್ಗಳಿಗೆ ಮಾತ್ರ ಸೀಮಿತವಾಗಿದ್ದು, ದಲಿತರ ಮೇಲೆ ದೌರ್ಜನ್ಯಗಳು ನಡೆದಾಗ ಗ್ರಾಮಗಳಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸೌಹಾರ್ದ ವಾತಾವರಣ ನಿರ್ಮಿಸುವ ಕೆಲಸ ಮಾಡಿಲ್ಲ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಕಲ್ಪತರು ಕಾಲೇಜು ಆಡಿಟೋರಿಯಂನಲ್ಲಿ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಶಾಸಕ ಕೆ. ಷಡಕ್ಷರಿ ನೇತೃತ್ವದಲ್ಲಿ ನಡೆದ ತಾಲ್ಲೂಕು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಕಾರ್ಯವೈಖರಿಯನ್ನು ತೀವ್ರವಾಗಿ ಖಂಡಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಶಾಸಕ ಕೆ. ಷಡಕ್ಷರಿ, ಸಮಾಜದಲ್ಲಿ ಪ್ರತಿಯೊಬ್ಬರೂ ಬಾಂಧವ್ಯದಿಂದ ಬದುಕಬೇಕು. ಸಮಾಜ ಕಲ್ಯಾಣ ಇಲಾಖೆ ಕಾಲಹರಣ ಮಾಡದೆ ಪೊಲೀಸ್ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಗ್ರಾಮಗಳಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸೌಹಾರ್ದ ವಾತಾವರಣ ನಿರ್ಮಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಪ್ರಮುಖ ಸ್ಥಳಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪಿಸಬೇಕು. ಈಗಾಗಲೇ ತುಮಕೂರು, ಅರಸೀಕೆರೆ, ಮಧುಗಿರಿ ಸೇರಿದಂತೆ ರಾಜ್ಯದ ಹಲವೆಡೆ ದಾರ್ಶನಿಕರ ಪುತ್ಥಳಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಲಾಗಿದೆ. ಆದರೆ ತಿಪಟೂರಿನಲ್ಲಿ ಮಾತ್ರ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಸ್ಥಾಪನೆಗೆ ಅನೇಕ ಸಬೂಬುಗಳನ್ನು ಹೇಳಲಾಗುತ್ತಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಕೆ. ಷಡಕ್ಷರಿ, ರಾಜ್ಯದ ವಿವಿಧ ಭಾಗಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ದಾರ್ಶನಿಕರ ಪುತ್ಥಳಿಗಳನ್ನು ಯಾವ ಮಾನದಂಡದಡಿ ಸ್ಥಾಪಿಸಲಾಗಿದೆ ಎಂಬ ಮಾಹಿತಿ ಸಂಗ್ರಹಿಸಿ, ತುರ್ತಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಿಪಟೂರು ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ವೆಂಕಟೇಶ್ ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಇಂತಹ ಅಧಿಕಾರಿಯಿಂದ ಆಡಳಿತಕ್ಕೆ ಕೆಟ್ಟ ಹೆಸರು ಬರುತ್ತಿದ್ದು, ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.
ತಾಲ್ಲೂಕಿನಲ್ಲಿ ಸಾರ್ವಜನಿಕ ಸ್ಮಶಾನಕ್ಕಾಗಿ ಕಂದಾಯ ಇಲಾಖೆ ಗುರುತಿಸಿರುವ ಜಾಗಗಳನ್ನು ಅನಧಿಕೃತವಾಗಿ ಒತ್ತುವರಿ ಮಾಡಲಾಗುತ್ತಿದೆ. ತಾಲ್ಲೂಕು ಆಡಳಿತ ಒತ್ತುವರಿ ತೆರವುಗೊಳಿಸಿ ಸುತ್ತಲೂ ತಂತಿಬೇಲಿ ನಿರ್ಮಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಾಗತಿಹಳ್ಳಿ ಕೃಷ್ಣಮೂರ್ತಿ ಆಗ್ರಹಿಸಿದರು.
ದಲಿತ ಮುಖಂಡ ಮತ್ತಿಘಟ್ಟ ಶಿವಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಮೀಸಲು ಹಣ ದುರುಪಯೋಗವಾಗುತ್ತಿದೆ. ಮೀಸಲು ಹಣವನ್ನು ಪರಿಶಿಷ್ಟರ ಕಲ್ಯಾಣಕ್ಕೆ ಬಳಸದೆ, ಕೇವಲ ದಲಿತ ಕೇರಿಗಳ ಚರಂಡಿ ಸ್ವಚ್ಛತೆ ಹಾಗೂ ವಿದ್ಯುತ್ ದೀಪ ಅಳವಡಿಕೆಗೆ ಮಾತ್ರ ಬಳಸಲಾಗುತ್ತಿದೆ. ಪರಿಶಿಷ್ಟ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಬಳಸಬೇಕಾದ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸುವುದು ಸರಿಯಲ್ಲ ಎಂದು ಹೇಳಿದರು.
ವಸತಿ ಹಾಗೂ ನಿವೇಶನ ರಹಿತರಿಗೆ ನಿವೇಶನ ನೀಡಲು ತುರ್ತು ಕ್ರಮ ಕೈಗೊಳ್ಳಬೇಕು. ಬಗರ್ ಹುಕ್ಕುಂ ಸಾಗುವಳಿ ಚೀಟಿ ವಿತರಣೆಗೂ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಶಾಸಕ ಕೆ. ಷಡಕ್ಷರಿ ಮಾತನಾಡಿ, ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಹಿತ ಕಾಯಲು ಬದ್ಧವಾಗಿದೆ. ತಾಲ್ಲೂಕಿನಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದೆನೆ.ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ ಹಾಗೂ ಡಾ. ಬಾಬು ಜಗಜೀವನ್ ರಾಮ್ ಭವನ ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿವೆ. ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ತಹಸೀಲ್ದಾರ್ ಮೋಹನ್ ಕುಮಾರ್, ಡಿವೈಎಸ್ಪಿ ಉಮೇಶ್, ಗ್ರೇಡ್-2 ತಹಸೀಲ್ದಾರ್ ಜಗನ್ನಾಥ್, ಪೌರಾಯುಕ್ತ ವಿಶ್ವೇಶ್ವರ ಬದರಗಡೆ, ನಗರ ಠಾಣೆ ವೃತ್ತ ನಿರೀಕ್ಷಕ ರವಿಕುಮಾರ್, ದಲಿತ ಮುಖಂಡರಾದ ಕೊಪ್ಪ ಶಾಂತಪ್ಪ, ಕುಪ್ಪಾಳು ರಂಗಸ್ವಾಮಿ, ಮಾಜಿ ಎಪಿಎಂಸಿ ಅಧ್ಯಕ್ಷ ಬಜಗೂರು ಮಂಜುನಾಥ್, ಕಂಚಾಘಟ್ಟ ಮಧುಸೂಧನ್, ಯಗಚೀಕಟ್ಟೆ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ತ್ರಿವೇಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.





