ಪೌರಕಾರ್ಮಿಕರಿಗೆ ಸಮವಸ್ತ್ರ, ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ – ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜನೆ.
ತಿಪಟೂರು, ಜು. 18: ನಿವೃತ್ತ ಎಸಿಪಿ ಹಾಗೂ ಬಿಜೆಪಿ ಮುಖಂಡ ಲೋಕೇಶ್ವರ್ ಅವರು ತಮ್ಮ ಹುಟ್ಟುಹಬ್ಬವನ್ನು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡರು.

ನಗರದ ತಮ್ಮ ನಿವಾಸದ ಬಳಿ ನಡೆದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಸಮವಸ್ತ್ರ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಲೇಖನ ಸಾಮಗ್ರಿ, ಪತ್ರಿಕಾ ವಿತರಕರಿಗೆ ಬಟ್ಟೆಗಳನ್ನು ವಿತರಿಸಲಾಯಿತು. ಜೊತೆಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿತ್ತು. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ ಲೋಕೇಶ್ವರ್ ಅವರಿಗೆ ಗಣ್ಯರು ಹಾಗೂ ಸಾರ್ವಜನಿಕರು ಶುಭಾಶಯ ಕೋರಿದರು.

ಈ ಮೊದಲು ಬೆಂಗಳೂರಿನ ತಾವು ನಡೆಸುತ್ತಿರುವ ಮಾತೃಶ್ರೀ ಮನೋವಿಕಾಸ ಕೇಂದ್ರದಲ್ಲಿ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಅವರು, ಬಳಿಕ ತಿಪಟೂರಿನಲ್ಲಿ ಅಭಿಮಾನಿಗಳೊಂದಿಗೆ ಸಂಭ್ರಮ ಹಂಚಿಕೊಂಡರು.
ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಿಸಿ ಮಾತನಾಡಿದ ಲೋಕೇಶ್ವರ್, ಸಮಾಜದ ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕರು ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಯ ಸೇವೆ ಅತ್ಯಂತ ಅಮೂಲ್ಯವಾಗಿದೆ. ಪೌರಕಾರ್ಮಿಕರು ಸಮಾಜದ ಕೊಳೆಯನ್ನು ಸ್ವಚ್ಛಗೊಳಿಸುತ್ತಿದ್ದರೂ, ಅವರಿಗೆ ಸಮಾಜದಲ್ಲಿ ಸಿಗಬೇಕಾದ ಗೌರವ ಇನ್ನೂ ಸಂಪೂರ್ಣವಾಗಿ ದೊರೆಯುತ್ತಿಲ್ಲ. ದಲಿತರು ಹಾಗೂ ಪೌರಕಾರ್ಮಿಕರನ್ನು ಗೌರವದಿಂದ ಕಾಣುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಹೇಳಿದರು.

ಖ್ಯಾತ ವಕೀಲ ಗುರುರಾಜ್ ಮಾತನಾಡಿ, ಲೋಕೇಶ್ವರ್ ಅವರು ಪೊಲೀಸ್ ಇಲಾಖೆಯಲ್ಲಿ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸಿ ತಾಲೂಕಿಗೆ ಹೆಮ್ಮೆ ತಂದಿದ್ದು, ನಿವೃತ್ತಿಯ ಬಳಿಕವೂ ವಿವಿಧ ಸಮಾಜಮುಖಿ ಕಾರ್ಯಗಳ ಮೂಲಕ ಜನಸೇವೆಯಲ್ಲಿ ತೊಡಗಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಸಂಸ್ಥಾಪಕ ಸದಸ್ಯ ಡಾ. ಸುಬ್ಬಣ್ಣ, ಕಟ್ಟಿಗೇನಹಳ್ಳಿ ಸದಾಶಿವಯ್ಯ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೆ.ಎಂ. ರಾಜಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಶ್ವತ್ ನಾರಾಯಣ್, ಪ್ರಸನ್ನಕುಮಾರ್, ತರಕಾರಿ ಗಂಗಾಧರ್, ಸೊಪ್ಪು ಗಣೇಶ್.ಮಾಜಿ ನಗರಸಭಾ ಸದಸ್ಯರಾದ ಭಾರತಿ ಮಂಜುನಾಥ್ .ಸಂಗಮೇಶ್ ಸೇರಿದಂತೆ ಅನೇಕ ಗಣ್ಯರು ಹಾಗೂ ಅಭಿಮಾನಿಗಳು ಭಾಗವಹಿಸಿ ಲೋಕೇಶ್ವರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿದರು.
ವರದಿ :ಮಂಜುನಾಥ್ ಹಾಲ್ಕುರಿಕೆ





