ತಿಪಟೂರು: ದೆಹಲಿಯಲ್ಲಿ ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಖಂಡಿಸಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜುಲೈ 25ರಂದು ತಿಪಟೂರು ನಗರದ ನಗರಸಭೆ ವೃತ್ತದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಹಾಗೂ ತಿಪಟೂರು ಜನಸ್ಪಂದನಾ ಟ್ರಸ್ಟ್ ಅಧ್ಯಕ್ಷ ಸಿ.ಬಿ. ಶಶಿಧರ್, ಕೇಂದ್ರ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಸಾಲುಸಾಲು ಪರೀಕ್ಷಾ ಅಕ್ರಮಗಳು ನಡೆಯುತ್ತಿದ್ದು, ನೀಟ್ ಪರೀಕ್ಷೆಯ ಅಕ್ರಮಗಳಿಂದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಲಾಗುತ್ತಿದೆ ಎಂದು ಆರೋಪಿಸಿದರು.

ನೀಟ್ ಅಕ್ರಮವನ್ನು ವಿರೋಧಿಸಿ ದೆಹಲಿಯ ಜಂತರ್-ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿ ದೌರ್ಜನ್ಯ ಎಸಗಲಾಗಿದೆ. ಪ್ರತಿಭಟನೆಯನ್ನು ಹತ್ತಿಕ್ಕುವ ಉದ್ದೇಶದಿಂದ ವಿದ್ಯಾರ್ಥಿಗಳ ಮೇಲೆ ಅಮಾನವೀಯವಾಗಿ ವರ್ತಿಸಲಾಗಿದೆ. ಅಲ್ಲದೆ, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮೇಲೂ ಹಲ್ಲೆ ನಡೆದಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಟೀಕಿಸಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು. ನೀಟ್ ಪರೀಕ್ಷೆಯ ಅಕ್ರಮದಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು. ಅಕ್ರಮದ ಕುರಿತು ಸಮಗ್ರ ತನಿಖೆ ನಡೆಸಿ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಸವರಾಜಪ್ಪ ಮಾತನಾಡಿ, ವಿದ್ಯಾರ್ಥಿಗಳ ಶಾಂತಿಯುತ ಹೋರಾಟದ ಮೇಲೆ ದೆಹಲಿ ಪೊಲೀಸರು ನಡೆಸಿರುವ ದೌರ್ಜನ್ಯ ಅಮಾನವೀಯ ಹಾಗೂ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ಭಾರತೀಯನ ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ಹತ್ತಿಕ್ಕುವ ಪ್ರಯತ್ನ ಖಂಡನೀಯವಾಗಿದೆ. ಇದೇ ಕಾರಣಕ್ಕಾಗಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು
ಸೌಹಾರ್ದ ತಿಪಟೂರು ಅಧ್ಯಕ್ಷ ಅಲ್ಲಾಭಕ್ಷು ಮಾತನಾಡಿ, ಕೇಂದ್ರ ಸರ್ಕಾರ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಹಾಕಲು ವಿದ್ಯಾರ್ಥಿಗಳ ನ್ಯಾಯಸಮ್ಮತ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ತಿಪಟೂರು ಜನಸ್ಪಂದನಾ ಟ್ರಸ್ಟ್, ಕರ್ನಾಟಕ ರಾಜ್ಯ ರೈತ ಸಂಘ, ಪ್ರಾಂತ ರೈತ ಸಂಘ, ಸಂವಿಧಾನ ರಕ್ಷಣಾ ಪಡೆ, ಸೌಹಾರ್ದ ತಿಪಟೂರು, ಕನ್ನಡಪರ ಹಾಗೂ ದಲಿತಪರ ಸಂಘಟನೆಗಳು ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಜುಲೈ 25ರ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಲಿವೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚನ್ನಬಸವಣ್ಣ, ಸಾದತ್, ರೈತ ಮುಖಂಡೆ ರಾಜಮ್ಮ, ಸಂವಿಧಾನ ರಕ್ಷಣಾ ಪಡೆ ಅಧ್ಯಕ್ಷ ಲೋಕೇಶ್, ಬೆಳೆಕಾವಲು ಸಮಿತಿ ಅಧ್ಯಕ್ಷ ಶ್ರೀಕಾಂತ್ ಕೆಳಹಟ್ಟಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ವರದಿ :ಮಂಜುನಾಥ್ ಹಾಲ್ಕುರಿಕೆ





