Spread the love

ತಿಪಟೂರು: ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಯಾವುದೇ ಸಂದರ್ಭದಲ್ಲಿ ನಡೆದರೂ ಎದುರಿಸಲು ಸಜ್ಜಾಗಿದ್ದು, ಹುಚ್ಚಗೊಂಡನಹಳ್ಳಿ ಕ್ಷೇತ್ರದಿಂದ ನಾನೇ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೊನ್ನವಳ್ಳಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಅಶ್ವತ್ ನಾರಾಯಣ್ ತಿಳಿಸಿದರು.

ನಗರದ ಟಿ.ಎಂ. ಮಂಜುನಾಥ ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಪಟೂರು ವಿಧಾನಸಭಾ ಕ್ಷೇತ್ರದಾದ್ಯಂತ ಉತ್ತಮ ಜನಸ್ಪಂದನೆ ವ್ಯಕ್ತವಾಗುತ್ತಿದೆ. ಸರ್ಕಾರ ಜಿ.ಪಂ. ಹಾಗೂ ತಾ.ಪಂ. ಚುನಾವಣೆ ನಡೆಸಲು ಮುಂದಾಗಿದ್ದು, ಚುನಾವಣೆಗೆ ಪಕ್ಷೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ ಎಂದರು.

ತಿಪಟೂರು ತಾಲೂಕಿನಲ್ಲಿ ಐದು ಜಿಲ್ಲಾ ಪಂಚಾಯಿತಿ ಹಾಗೂ 17 ತಾಲೂಕು ಪಂಚಾಯಿತಿ ಕ್ಷೇತ್ರಗಳಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ಕಚೇರಿಯನ್ನು ಸಂಪರ್ಕಿಸಬಹುದು. ಈ ನಿಟ್ಟಿನಲ್ಲಿ ಸಂಘಟನಾ ಚಟುವಟಿಕೆಗಳನ್ನು ಚುರುಕುಗೊಳಿಸಲಾಗುತ್ತಿದೆ ಎಂದು ಹೇಳಿದರು.

ತಾಲೂಕು ಆಡಳಿತ ಪಕ್ಷಪಾತದ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಶಾಲಾ-ಕಾಲೇಜುಗಳಿಗೆ ಉಚಿತವಾಗಿ ನೋಟ್‌ಬುಕ್‌ ವಿತರಣೆ ಮಾಡಿದ ಸಂದರ್ಭದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಾಲೂಕು ಆಡಳಿತ, ವಿಧಾನ ಪರಿಷತ್ ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು ಶಾಲಾ-ಕಾಲೇಜುಗಳ ಬಳಿ ಬಹಿರಂಗವಾಗಿ ಪ್ರಚಾರ ನಡೆಸಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಅಶ್ವತ್ ನಾರಾಯಣ್ ಆರೋಪಿಸಿದರು.

ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ವಿರೂಪಾಕ್ಷಯ್ಯ ಮಾತನಾಡಿ, ಅಶ್ವತ್ ನಾರಾಯಣ್ ಅವರು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದು, ಮುಂದಿನ ಚುನಾವಣಾ ರೂಪುರೇಷೆಗಳ ಕುರಿತು ಚರ್ಚಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಮಾದಿಹಳ್ಳಿ ಮಂಜಣ್ಣ, ವಿಜಯ್ ಕುಮಾರ್, ಗ್ಯಾರಘಟ್ಟ ಶುಂಠಿ ಮಂಜುನಾಥ್, ಗಂಗಾಧರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ : ಮಂಜುನಾಥ್ ಹಾಲ್ಕುರಿಕೆ

error: Content is protected !!